ಕಾಂಗ್ರೆಸ್‌ ಗೆದ್ದರೂ ಹೈಕಮಾಂಡ್‌ ಡಿಕೆಶಿಯನ್ನು ಸಿಎಂ ಮಾಡಲ್ಲ: ಸಿದ್ದರಾಮಯ್ಯ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಕಾಂಗ್ರೆಸ್‌ ಹೈಕಮಾಂಡ್‌ ಮುಖ್ಯಮಂತ್ರಿ ಹುದ್ದೆಯನ್ನು ನೀಡುವುದಿಲ್ಲ. ಹೀಗಂತ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಖಾಸಗಿ ಸುದ್ದಿವಾಹಿನಿ ಎನ್‌ಡಿಟಿವಿ ವರದಿ ಮಾಡಿದೆ.

ಬೆಂಗಳೂರು (ಏ.04): ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಕಾಂಗ್ರೆಸ್‌ ಹೈಕಮಾಂಡ್‌ ಮುಖ್ಯಮಂತ್ರಿ ಹುದ್ದೆಯನ್ನು ನೀಡುವುದಿಲ್ಲ. ಹೀಗಂತ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಖಾಸಗಿ ಸುದ್ದಿವಾಹಿನಿ ಎನ್‌ಡಿಟಿವಿ ವರದಿ ಮಾಡಿದೆ. ತನಗೆ ನೀಡಿದ ವಿಶೇಷ ಸಂದರ್ಶನದಲ್ಲಿ ‘ಮುಖ್ಯಮಂತ್ರಿ ಹುದ್ದೆಗೆ ನಾನು ಆಕಾಂಕ್ಷಿ. ಜತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕೂಡ ಆಕಾಂಕ್ಷಿ. ಆದರೆ ಹೈಕಮಾಂಡ್‌ ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡುವುದಿಲ್ಲ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎಂದು ವರದಿ ಮಾಡಿದೆ.

ಅಲ್ಲದೆ, ಯುವ ಪೀಳಿಗೆಯ ನಾಯಕರಿಗೆ ಏಕೆ ಅವಕಾಶ ನೀಡಬಾರದು ಎಂಬ ಪ್ರಶ್ನೆಗೆ, ಇದು ನನ್ನ ಕಡೆಯ ಚುನಾವಣೆಯಾಗಿದೆ ಎಂದು 75 ವರ್ಷ ವಯಸ್ಸಿನ ಸಿದ್ದರಾಮಯ್ಯ ಹೇಳಿದರು ಎಂದು ವರದಿಯಲ್ಲಿ ತಿಳಿಸಲಾಗಿದೆ. ಇದೇ ವೇಳೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರುವ ಸಾಧ್ಯತೆಯನ್ನು ಸಂಪೂರ್ಣವಾಗಿ ಅಲ್ಲಗಳೆದಿರುವ ಸಿದ್ದರಾಮಯ್ಯ, ಕಾಂಗ್ರೆಸ್‌ ಪಕ್ಷವು ಜೆಡಿಎಸ್‌ ಜತೆ ಸೇರಿ ಸರ್ಕಾರ ರಚಿಸುವುದಿಲ್ಲ. ಅದರ ಅಗತ್ಯವೂ ಇರುವುದಿಲ್ಲ. ಏಕೆಂದರೆ, ಕಾಂಗ್ರೆಸ್‌ ಸಂಪೂರ್ಣ ಸ್ವ ಸಾಮರ್ಥ್ಯದಿಂದ ಅಧಿಕಾರಕ್ಕೆ ಬರುತ್ತದೆ ಎಂದು ಸಂದರ್ಶನದಲ್ಲಿ ತಿಳಿಸಿದ್ದಾರೆ ಎಂದು ವರದಿ ಮಾಡಲಾಗಿದೆ..

ಅಲ್ಲದೆ, ತಮ್ಮ ಕೋಲಾರ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್‌ ಒಪ್ಪಿದರೆ ಮಾತ್ರ ಕೋಲಾರದಿಂದಲೂ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ತಮಗೆ ಈಗಾಗಲೇ ವರುಣದಿಂದ ಟಿಕೆಟ್‌ ದೊರಕಿದ್ದು, ವರುಣದಿಂದಲೇ ಸ್ಪರ್ಧಿಸಲಿದ್ದೇನೆ. ಆದರೆ, ಕೋಲಾರದಲ್ಲಿ ಸ್ಪರ್ಧಿಸಿದರೆ ಸುತ್ತಲಿನ 20 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷಕ್ಕೆ ನೆರವಾಗಲಿದೆ ಎಂದು ಸ್ಥಳೀಯ ನಾಯಕರಿಂದ ಒತ್ತಾಯವಿದೆ. ಹೀಗಾಗಿ, ಈ ವಿಚಾರವನ್ನು ಹೈಕಮಾಂಡ್‌ಗೆ ತಿಳಿಸಿದ್ದೇನೆ. ಹೈಕಮಾಂಡ್‌ ಒಪ್ಪಿದರೆ ಮಾತ್ರ ಕೋಲಾರದಿಂದ ಸ್ಪರ್ಧಿಸುವೆ ಎಂದು ಅವರು ಸಂದರ್ಶನದಲ್ಲಿ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ…

 

Leave a Reply

Your email address will not be published. Required fields are marked *