ಬೆಂಗಳೂರು: ರಾಜ್ಯ ಸರ್ಕಾರ ಮಂಗಳವಾರ ಮಹತ್ವದ ಐಎಎಸ್ ಅಧಿಕಾರಿಗಳ ವರ್ಗಾವಣೆ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ವತಿಯಿಂದ ಪ್ರಕಟವಾದ ಅಧಿಸೂಚನೆಯ ಪ್ರಕಾರ ಹಲವು ಹಿರಿಯ ಅಧಿಕಾರಿಗಳಿಗೆ ಹೊಸ ಹುದ್ದೆಗಳ ಜವಾಬ್ದಾರಿ ನೀಡಲಾಗಿದೆ.
ನಿರೀಕ್ಷಿತ ಹುದ್ದೆಯಲ್ಲಿ ಇದ್ದ 1997 ಬ್ಯಾಚ್‌ನ ಐಎಎಸ್ ಅಧಿಕಾರಿ ಹರ್ಷ್ ಗುಪ್ತಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ಅಪೀಲು ನ್ಯಾಯಮಂಡಳಿ (KAT) ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಈ ಮೂಲಕ ತುಳಸಿ ಮದ್ದಿನೇನಿ ಅವರ ಹೆಚ್ಚುವರಿ ಹೊಣೆಗಾರಿಕೆಯನ್ನು ವಾಪಸ್ ಪಡೆಯಲಾಗಿದೆ.

ಇನ್ನೂ ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿದ್ದ ನಾಗರಾಜ ಎನ್.ಎಂ. ಅವರನ್ನು ಕರ್ನಾಟಕ ರಾಜ್ಯ ಏಡ್ಸ್ ತಡೆಗಟ್ಟುವ ಸಂಸ್ಥೆಯ ಒಂಬುಡ್ಸ್‌ಮನ್ ಆಗಿ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಕಲಬುರಗಿ ಜಿಲ್ಲಾ ಪಂಚಾಯತ್ ಸಿಇಒ ಆಗಿದ್ದ ಭನ್ವರ್ ಸಿಂಗ್ ಮೀನಾ ಅವರನ್ನು ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಅದೇ ರೀತಿ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದ ರಾಹುಲ್ ಶರಣಪ್ಪ ಸಂಕನೂರು ಅವರನ್ನು ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
