ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಆರಂಭವಾಗಬೇಕಿದ್ದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೊನೆಗೂ ಹಿಂಪಡೆಯಲಾಗಿದೆ. ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ ಬೆನ್ನಲ್ಲೇ ಜಂಟಿ ಕ್ರಿಯಾ ಸಮಿತಿ ಈ ಮಹತ್ವದ ತೀರ್ಮಾನ ಕೈಗೊಂಡಿದೆ.
ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದರು. ಮುಷ್ಕರದಿಂದ ಲಕ್ಷಾಂತರ ಪ್ರಯಾಣಿಕರಿಗೆ ತೊಂದರೆಯಾಗುವ ಸಾಧ್ಯತೆ ಇದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮುಷ್ಕರಕ್ಕೆ ತಾತ್ಕಾಲಿಕ ತಡೆ ನೀಡಿತ್ತು.

ನ್ಯಾಯಾಲಯದ ಆದೇಶದ ಬಳಿಕ ತುರ್ತು ಸಭೆ ನಡೆಸಿದ ಜಂಟಿ ಕ್ರಿಯಾ ಸಮಿತಿ, ಸಾರ್ವಜನಿಕ ಹಿತದೃಷ್ಟಿಯಿಂದ ಮುಷ್ಕರವನ್ನು ಹಿಂಪಡೆಯಲು ನಿರ್ಧರಿಸಿದೆ. ಇದರಿಂದ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಸಂಚಾರ ಯಥಾಸ್ಥಿತಿಯಲ್ಲಿ ಮುಂದುವರಿಯಲಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ.
ಸರ್ಕಾರ ಈಗಾಗಲೇ ಸಾರಿಗೆ ನೌಕರರಿಗೆ ಶೇ.12.5ರಷ್ಟು ವೇತನ ಹೆಚ್ಚಳ ಘೋಷಣೆ ಮಾಡಿರುವುದಾಗಿ ತಿಳಿಸಿದ್ದು, ಉಳಿದ ಬೇಡಿಕೆಗಳ ಕುರಿತು ಮುಂದಿನ ದಿನಗಳಲ್ಲಿ ಚರ್ಚೆ ನಡೆಸುವುದಾಗಿ ಭರವಸೆ ನೀಡಿದೆ.
ಮುಷ್ಕರ ವಾಪಸ್ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ಎಲ್ಲಾ ಸಾರಿಗೆ ನಿಗಮಗಳ ಬಸ್‌ಗಳು ಎಂದಿನಂತೆ ಸಂಚರಿಸಲಿವೆ ಎಂದು ಸಾರಿಗೆ ಇಲಾಖೆ ಮೂಲಗಳುತಿಳಿಸಿವೆ.
